ರಾಜ್ಯಸಾಮಾನ್ಯ.

ಮದ್ದೂರಿನ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ: ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ

ಸೋಮನಹಳ್ಳಿಯಿಂದ ಇತ್ತೀಚೆಗಷ್ಟೇ ಮದ್ದೂರಿಗೆ ಸ್ಥಳಾಂತರಗೊಂಡಿದ್ದ ಗಾರ್ಮೆಂಟ್ಸ್‌ನಲ್ಲಿ ಅವಘಡ; ಕಚ್ಚಾ ಸಾಮಗ್ರಿ, ಬಟ್ಟೆ ಹಾಗೂ ಯಂತ್ರೋಪಕರಣಗಳಿಗೆ ಹಾನಿ

ಮಂಡ್ಯ: ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಭಾರಿ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಇತ್ತೀಚೆಗಷ್ಟೇ ಈ ಗಾರ್ಮೆಂಟ್ಸ್ ಘಟಕವನ್ನು ಸೋಮನಹಳ್ಳಿಯಿಂದ ಮದ್ದೂರು ನಗರಕ್ಕೆ ಸ್ಥಳಾಂತರಿಸಲಾಗಿತ್ತು. ಫ್ಯಾಕ್ಟರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಂದಿನಂತೆ ಬೆಳಗ್ಗೆ ಕಾರ್ಮಿಕರು ಕೆಲಸಕ್ಕೆ ಆಗಮಿಸಿದಾಗ ಫ್ಯಾಕ್ಟರಿಯೊಳಗೆ ಬೆಂಕಿ ಹೊತ್ತಿ ಉರಿಯುತ್ತಿರುವುದು ಗಮನಕ್ಕೆ ಬಂದಿದೆ.

ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಮೂರುಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಆದರೆ ಅಗ್ನಿ ಅವಘಡದ ವೇಳೆಗೆ ಫ್ಯಾಕ್ಟರಿಯಲ್ಲಿದ್ದ ಕಚ್ಚಾ ಸಾಮಗ್ರಿಗಳು, ಬಟ್ಟೆಗಳು ಹಾಗೂ ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಪರಿಣಾಮವಾಗಿ ಗಾರ್ಮೆಂಟ್ಸ್ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಘಟನೆಯಿಂದ ಫ್ಯಾಕ್ಟರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿಯನ್ನು ಮತ್ತಷ್ಟು ವ್ಯಾಪಿಸುವುದನ್ನು ತಡೆಯಲಾಗಿದೆ.

ಘಟನಾ ಸ್ಥಳಕ್ಕೆ ಮದ್ದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆಂಕಿ ಕಾಣಿಸಿಕೊಳ್ಳಲು ಕಾರಣ ಹಾಗೂ ಸಂಭವಿಸಿರುವ ನಷ್ಟದ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *