ರಾಜಕೀಯ

ಸ್ವಚ್ಛ ದಾಸರಹಳ್ಳಿ ನಿರ್ಮಾಣಕ್ಕೆ ಆದ್ಯತೆ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಕೈಗೊಂಡಿರುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ ಮತ್ತು ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯಕ್ಕೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಪರಿಶೀಲನೆ ನಡೆಸಿದರು.

ಇಂದು ದಾಸರಹಳ್ಳಿ ಕ್ಷೇತ್ರದ ಮಲ್ಲಸಂದ್ರ ಪ್ರದೇಶಕ್ಕೆ ಭೇಟಿ ನೀಡಿ, ಕಸ ವಿಲೇವಾರಿ ಕಾರ್ಯದ ಕುರಿತು ಸ್ಥಳದಲ್ಲೇ ಪರಿಶೀಲನೆ ನಡೆಸಿದರು.

ಕಸ ಸಂಗ್ರಹಣೆ ಹಾಗೂ ದೈನಂದಿನ ಸ್ವಚ್ಛತೆಯ ಕುರಿತಾದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ನಂತರ ಪೌರಕಾರ್ಮಿಕರೊಂದಿಗೆ ಮಾತನಾಡಿದ ಸಚಿವರು, ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದು ಎಂದು ಇದೇ ಸಂದರ್ಭದಲ್ಲಿ ಶ್ಲಾಘಿಸಿದ್ದಾರೆ.

ಕೆಲಸದ ಸ್ಥಳದಲ್ಲಿ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ವಿಚಾರಿಸಿದರು, ಕರ್ತವ್ಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಮತ್ತು ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸಲು ಅಗತ್ಯ ಸೂಚನೆಗಳನ್ನು ನೀಡಿದರು.

ಈ ವೇಳೆ ಸ್ವಚ್ಛತೆಗೆ ಆದ್ಯತೆ ನೀಡುವ ಕುರಿತು ಕಠಿಣ ನಿಲುವು ವ್ಯಕ್ತಪಡಿಸಿದ ಸಚಿವರು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸರಿಯಾಗಿ ಕೆಲಸ ಮಾಡದೆ ಬೇಜವಾಬ್ದಾರಿತನ ತೋರುವ ಖಾಯಂ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಸಿಬ್ಬಂದಿ ಕರ್ತವ್ಯದಲ್ಲಿ ಲೋಪವೆಸಗಿದರೆ, ಅವರನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸ್ವಚ್ಛ ದಾಸರಹಳ್ಳಿ ನಿರ್ಮಾಣಕ್ಕೆ ಸಾರ್ವಜನಿಕರು ಹಾಗೂ ಅಧಿಕಾರಿಗಳು ಕೈಜೋಡಿಸಿ ಸಮನ್ವಯದಿಂದ ಕೆಲಸ ಮಾಡಬೇಕೆಂದು ಅವರು ಕರೆ ನೀಡಿದರು.

Leave a Reply

Your email address will not be published. Required fields are marked *